ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿಯಾದ ಡಿ.ಕೆ ಶಿವಕುಮಾರ್!

ಡಿ.ಕೆ ಶಿವಕುಮಾರ್

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗೆಗಿನ ಊಹಾಪೋಹಗಳಿಗೆ ಇಂಬು ನೀಡಿದೆ.

ಪಕ್ಷದೊಳಗಿನ ಅಧಿಕಾರ ಹಂಚಿಕೆ ‘ಒಪ್ಪಂದ’ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಭೇಟಿ ನಡೆದಿದೆ.ಪ್ರಿಯಾಂಕಾ ಗಾಂಧಿ ಅವರೊಂದಿಗೆ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂಬುದರ ಕುರಿತು ಡಿಕೆ ಶಿವಕುಮಾರ್ ಯಾವುದೇ ಮಾಹಿತಿ ನೀಡಲಿಲ್ಲ.

‘ನಾನು ಅಲ್ಲಿಗೆ ಭೇಟಿ ನೀಡಿದ್ದೆ’ ಎಂದಷ್ಟೇ ಹೇಳಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ಅಧಿಕಾರ ಹಂಚಿಕೆ ಮಾತುಕತೆಯಾಗಿದ್ದು, ಅದರಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಎರಡೂವರೆ ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು.ಇಬ್ಬರೂ ನಾಯಕರು ಅಂತಹ ಯಾವುದೇ ಔಪಚಾರಿಕ ಒಪ್ಪಂದವನ್ನು ಸಾರ್ವಜನಿಕವಾಗಿ ನಿರಾಕರಿಸಿದ್ದರೂ, ಪಕ್ಷದ ವಲಯಗಳಲ್ಲಿ ಈ ಬಗ್ಗೆ ಸಾಕಷ್ಟು ಊಹಾಪೋಹಗಳು ಮುಂದುವರೆದಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಪಮುಖ್ಯಮಂತ್ರಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಐದು ವರ್ಷಗಳ ಅವಧಿಯ ಅರ್ಧಭಾಗವನ್ನು ತಲುಪುತ್ತಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದ್ದು, ಮುಂಬರುವ ತಿಂಗಳುಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಆಂತರಿಕ ಚರ್ಚೆಗಳು ತೀವ್ರಗೊಳ್ಳುವ ನಿರೀಕ್ಷೆಯಿದೆ.

twitter

Leave a Reply

Your email address will not be published. Required fields are marked *